ಹುಬ್ಬಳ್ಳಿ: ಕುಂದಗೋಳ ಉಪಚುನಾವಣಾ ಕಣ ರಂಗೇರಿದ್ದು, ಇಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಪಕ್ಷೇತರರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕೈ ಪಾಳೆಯದಿಂದ ಕುಸುಮಾ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ ತಮ್ಮ ಬೆಂಬಲಿಗರು, ನಾಯಕರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಕಲಘಗಿ ತಹಸೀಲ್ದಾರ್ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸಲಿರುವ ದಿ. ಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಅವರು ಕುಂದಗೋಳ ಗಾಳಿಮರೇಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿಯವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮ ಪತ್ರ ಸಲ್ಲಿಸಲಿದ್ದಾರೆ. ಕುಸುಮಾ ಶಿಳ್ಳಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಸಾಥ್ ನೀಡಲಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ ಅವರು ಮರಾಠ ಭವನದಿಂದ ತಹಸೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ಅವರಿಗೆ ಸ್ಥಳೀಯ ಬಿಜೆಪಿ ಶಾಸಕರು ಸಾಥ್ ನೀಡಲಿದ್ದಾರೆ.