ಧಾರವಾಡ:ಕೊರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ (ಮೇ 31) ಜಿಲ್ಲಾದ್ಯಂತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶವು ಮೇ 30ರ ಸಂಜೆ 7 ರಿಂದ ಜೂನ್ 1ರ ಬೆಳಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ, ಸಭೆ ಸಮಾರಂಭ ಹಾಗೂ ಎಲ್ಲ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.
ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ಈ ಮೊದಲೇ ನಿಗದಿಯಾಗಿದ್ದ ಮದುವೆಗಳಿಗೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ 50 ಜನರು ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರದಲ್ಲಿ ಕೇವಲ 20 ಜನರು ಭಾಗವಹಿಸಲು ಅವಕಾಶವಿದೆ.
ಸರ್ಕಾರಿ ವಾಹನಗಳಿಗೆ ಮತ್ತು ಕೋವಿಡ್-19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಅವಧಿಯಲ್ಲಿ ಕಿರಾಣಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಾಲು ಮೊಸರು, ಚಿಕನ್, ಮಟನ್ ಹಾಗೂ ಇತರ ಅವಶ್ಯಕ ವಸ್ತುಗಳ ಸೇವೆಗಳು ಲಭ್ಯವಿರುತ್ತವೆ. ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ನೀಡಬಹುದು.
ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಹುಬ್ಬಳ್ಳಿ ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿರುವ ವಲಸೆ ಕಾರ್ಮಿಕರಿಗೆ ರೈಲು ನಿಯೋಜಿತವಾಗಿದೆ. ಆದ್ದರಿಂದ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಪ್ರಯಾಣಿಸುವ ವಲಸೆ ಕಾರ್ಮಿಕರಿಗೆ ಹಾಗೂ ಅವರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತಹ ವ್ಯಕ್ತಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ, ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶದ ಉಲ್ಲಂಘನೆ) ಅಡಿ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.