ಧಾರವಾಡ: ನೂತನ ಯಾತ್ರಿ ನಿವಾಸ ಉದ್ಘಾಟನೆಗೆ ಮಾಜಿ ಸಚಿವ ವಿನಯ್ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಶಾಸಕ ಅಮೃತ ದೇಸಾಯಿ ಅವರಿಗೆ ತೀವ್ರ ಮುಜುಗರವಾಗಿದೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಯಾತ್ರಿ ನಿವಾಸದ ಉದ್ಘಾಟನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಶಾಸಕ ಅಮೃತ ದೇಸಾಯಿ ಅವರಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಬಲಿಗರು ಶಾಕ್ ನೀಡಿದರು. ವಿನಯ್ ಕುಲಕರ್ಣಿ ಅವರ ಅವಧಿಯಲ್ಲಿ ಹೆಬ್ಬಳ್ಳಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಆದರೆ ಯಾತ್ರಿ ನಿವಾಸದ ಮುಂದೆ ಹಾಕಲಾಗುವ ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ಹಾಕದೇ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾತ್ರಿ ನಿವಾಸಕ್ಕೆ ಬೀಗ ಹಾಕಿ ಉದ್ಘಾಟನೆಗೆ ಅವಕಾಶ ಮಾಡಿಕೊಡದೆ ವಿರೋಧಿಸಿದ್ದಾರೆ.