ಕಲಬುರಗಿ: ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ನಡೆಸಿದರು.
ಚಿಂಚೋಳಿ ಸೇರಿದಂತೆ ಐನೋಳಿ, ಚಿಮ್ಮನಚೊಡ, ಕೊಂಚಾವರಂಗಳಲ್ಲಿ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಗೆಲುವಿನ ಕುರಿತು ಬೂತ್ ಮಟ್ಟದ ಸಮಾಲೋಚನಾ ಸಭೆ ನಡೆಸಲಾಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ನಗರ ಜಿಲ್ಲಾಧ್ಯಕ್ಷ ಬಿ.ಜಿ. ಪಾಟೀಲ್, ಮಾಜಿ ಸಚಿವ ಸುನೀಲ್ ವಲ್ಯಾಪುರೆ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಒಂದು ಕಡೆ ಬಿಜೆಪಿ ಅಬ್ಬರದ ಪ್ರಚಾರ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಮಾತ್ರ ಕ್ಷೇತ್ರದತ್ತ ಸುಳಿಯುವ ಮಾತೇ ಆಡುತ್ತಿಲ್ಲ ಎನ್ನಲಾಗ್ತಿದೆ. ಕ್ಷೇತ್ರದ ಉಸ್ತುವಾರಿ ಹೊತ್ತಿರುವ ಡಿಸಿಎಂ ಡಾ. ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಗೃಹ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡ ಯಾರೊಬ್ಬರು ಸಹ ಇತ್ತ ಕಣ್ಣು ಹಾಕಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಕಾಂಗ್ರೆಸ್ ನಾಯಕರ ನಡೆ ಏನು ಎಂಬುದು ನಿಗೂಢವಾಗಿದೆ.