ಕಲಬುರಗಿ:ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಜೇವರ್ಗಿ ಪಿಎಸ್‌ಐ ಹಾಗೂ ಸಿಪಿಐರನ್ನು ಅಮಾನತು ಮಾಡಲು ಆಗ್ರಹಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಅನ್ನಪೂರ್ಣ ಕ್ರಾಸ್ ನಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಜಿಲ್ಲಾಸ್ಪತ್ರೆ ಸರ್ಕಲ್‌ನಲ್ಲಿ ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಜೇವರ್ಗಿಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪಿಎಸ್‌ಐ, ಸಿಪಿಐ ದೌರ್ಜನ್ಯ ನಡೆಸುತ್ತಿದ್ದಾರೆ. ಸುಖಾಸುಮ್ಮನೆ ವಿಎಚ್‌ಪಿ, ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿ ಕಾರ್ಯಕರ್ತರನ್ನು ತುಳಿಯುವ ಕುತಂತ್ರ ನಡೆಸಿದ್ದಾರೆ. ಅಲ್ಲದೆ ಈ ಇಬ್ಬರು ಅಧಿಕಾರಿಗಳು ಸೇರಿಕೊಂಡು ಅಕ್ರಮ ಪಡಿತರ ಸಾಗಾಟದಲ್ಲಿ ತೊಡಗಿರುವುದಾಗಿ ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿಯಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಈ ಇಬ್ಬರು ಅಧಿಕಾರಿಗಳ ಮೇಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಭದ್ರತೆಗಾಗಿ ಸ್ಥಳದಲ್ಲಿ 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.
ಓದಿ :ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ ಬಸ್ : ಇಬ್ಬರು ಸಾವು, ಐವರು ಪ್ರಯಾಣಿಕರ ಸ್ಥಿತಿ ಗಂಭೀರ