ಬೆಳ್ತಂಗಡಿ :ಆದಿವಾಸಿ ಸಮುದಾಯದ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸರ್ಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ತಂಡವೊಂದು, ಆದಿವಾಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.
ಅಳಕೆ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬುವರು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ : ಏ.19ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭದಲ್ಲಿ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಅಳತೆ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯ ಮೇಲೆ ಆರೋಪಿಗಳು ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆಗ ತಡೆಯಲು ಬಂದ ಇನ್ನಿತರರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದೌರ್ಜನ್ಯಕ್ಕೀಡಾದ ಮಹಿಳೆ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಎಸಿಬಿ ಡಿವೈಎಸ್ಪಿ ಹೆಸರಿನಲ್ಲಿ ಪಂಚಾಯತ್ ಸಿಇಒಗೆ ಹಣಕ್ಕಾಗಿ ಬೇಡಿಕೆ