ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾದ ಪಂಜಾಬ್ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ಸಿಗರೂ ಹೋರಾಟ ನಡೆಸಿದ ಘಟನೆ ಗುರುವಾರ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮುಂಭಾಗ ಏಕಾಏಕಿ ಪ್ರತಿಭಟನೆಗಿಳಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಲು ಆರಂಭಿಸಿ, ಎರಡೂ ಪಕ್ಷಗಳ ನಡುವೆ ವಾಗ್ವಾದ ಆರಂಭವಾಯಿತು. ಎರಡೂ ಕಡೆಗಳಲ್ಲಿ ಪರ ವಿರೋಧ ಘೋಷಣೆಗಳು ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಮಾಡಲು ಯತ್ನಿಸಿದರೂ ಫಲ ನೀಡಲಿಲ್ಲ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಂದೆ ದೂಡಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಬಳಿಕ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಸಮಾಧಾನಿಸಿ ಹಿಂದೆ ಕಳುಹಿಸಿದ್ದಾರೆ.