ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಮಾರ್ಚ್ 28ರಿಂದ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಸೋಂಕು ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ ಏಳಕ್ಕೇರಿದೆ. ಅಲ್ಲದೆ ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿಯೂ ತೀವ್ರತರವಾದ ಏರಿಕೆ ಕಂಡು ಬರುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಇದ್ದರೂ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಇತರ ಕಾರಣಗಳನ್ನು ನೀಡಿ ಸಾರ್ವಜನಿಕರ ಅನಗತ್ಯ ಓಡಾಟಗಳಿಗೆ ನಿರ್ಬಂಧ ಹೇರದಿದ್ದರೆ ಪರಿಸ್ಥಿತಿ ಕೈ ಮೀರುವುದು ಖಚಿತ. ಸೋಂಕು ಜಿಲ್ಲಾದ್ಯಂತ ಹರಡಿದ್ದಲ್ಲಿ ಅದಕ್ಕೆ ಪರಿಹಾರವೂ ಕಷ್ಟ ಎಂದು ಈ ತೀರ್ಮಾನ ಕೈಗೊಳ್ಳಲಾಗಿದೆ.