ಬೆಳ್ತಂಗಡಿ(ಮಂಗಳೂರು):ದುಷ್ಕರ್ಮಿಗಳು ಊಟಕ್ಕೆಂದು ಕುಳಿತಿದ್ದ ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿ ಅಕ್ಕು (85) ಮೃತರು. ಹಾಡಹಗಲೇ ವೃದ್ಧೆಯ ಮೇಲೆ ಹಲ್ಲೆ ಮಾಡಿ ಅವರ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದೋಚಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ಕು ಅವರು ತಮ್ಮ ಮಗ ಡೀಕಯ್ಯ, ಸೊಸೆ ಲಲಿತಾ, ಮಗಳು ದೇವಕಿ ಹಾಗೂ ಮೊಮ್ಮಗಳೊಂದಿಗೆ ವಾಸವಿದ್ದರು. ಮಗ-ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ ಅವರು ಮನೆಯಲ್ಲಿ ಇರಲಿಲ್ಲ. ನಂತರ ಹೊರಗೆ ಬಂದು ನೋಡಿದಾಗ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡುಬಂದಿದೆ.
ಬಳಿಕ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಚಿಂತಾಜನಕ ಸ್ಥಿತಿಯಲ್ಲಿ ಒದ್ದಾಡುತಿದ್ದರು. ತಕ್ಷಣ ಆಸ್ಪತ್ರೆಗೆ ಕೊಂಡು ಹೋಗಲು ವಾಹನಕ್ಕೆ ತಿಳಿಸಿದರೂ ವಾಹನ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಮೃತದೇಹವನ್ನು ಪರಿಶೀಲಿಸಿದಾಗ ಕಿವಿಯಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದರೋಡೆ ಮಾಡಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದ ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದ ಮೂಲಕ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಿದ್ದಾರೆ.