ಮಂಗಳೂರು(ದಕ್ಷಿಣಕನ್ನಡ) :ಬಿಜೆಪಿ ಮುಖಂಡರಾಗಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ರಾಜ್ಯ ಸರ್ಕಾರ ಪದಚ್ಯುತಿಗೊಳಿಸಿ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್ ರಮೇಶ್ ಅವರು ಆದೇಶಿಸಿದ್ದಾರೆ.
ರಹೀಂ ಉಚ್ಚಿಲ್ ಅವರನ್ನು ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ರಹೀಂ ಉಚ್ಚಿಲ್ ಅವರು, ಈ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ವಾಟ್ಸ್‌ಆ್ಯಪ್‌ನಲ್ಲಿ ಮಾಹಿತಿ ಸಿಕ್ಕಿದೆ ಎಂದರು.