ಮಂಗಳೂರು: ನದಿ ನೀರಿನ ಒಳ ಹರಿವಿನ ಲಭ್ಯತೆ ಆಧರಿಸಿ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಗತ್ಯ ಕ್ರಮಗಳನ್ನು ಕೈಗೊಂಡು ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ನದಿ ನೀರಿನ ಹರಿವು ದಿನೇ ದಿನೆ ಕ್ಷೀಣಿಸುತ್ತಿದೆ. ಮುಂದಿನ ಮಾನ್ಸೂನ್ ಮಳೆ ಪ್ರಾರಂಭದವರೆಗೆ ನೀರಿನ ಲಭ್ಯತೆಯನ್ನು ಆಧರಿಸಿ ಕುಡಿಯುವ ನೀರಿನ್ನು ಸರಬರಾಜು ಮಾಡಬೇಕೆಂದು ಸೂಚನೆ ನೀಡಿದರು.
ಇನ್ನು ಸಾರ್ವಜನಿಕರು ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಲು ಅರಿವು ಮೂಡಿಸುವುದರೊಂದಿಗೆ ಕಡಿಮೆ ಪ್ರಮಾಣದಲ್ಲಿ ಬಳಸುವಂತೆ ಮನವರಿಕೆ ಮಾಡಿಕೊಡಬೇಕು. ಕುಡಿಯುವ ನೀರು ಸರಬರಾಜು ಕೊಳವೆಗಳಲ್ಲಿ ಸೋರಿಕೆಯಾಗುತ್ತಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಲ್ಲಿ ನೀರಿನ ಪೈಪ್‍ಗಳಿಗೆ ನೇರವಾಗಿ ಕೆಲವರು ಪಂಪ್‍ಗಳನ್ನು ಅಳವಡಿಸಿ ನೀರು ಸೆಳೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಹ ಎಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್, ಪ್ರೊಬೇಶನರಿ ಐ.ಎ.ಎಸ್. ಮೋನಾ ರೋತ್ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.