ಮೈಸೂರು: ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ದಿನದಿಂದ ದಿನಕ್ಕೆ ಜೆಡಿಎಸ್ ಕುಗ್ಗುತ್ತಿದೆ. ಬಿಜೆಪಿ ಬೆಳೆಯುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಇಂದು ಮೈಸೂರು- ಚಾಮರಾಜನಗರ ಜಿಲ್ಲೆಯ ಪಕ್ಷ ಸಂಘಟನೆ ಹಾಗೂ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಪಕ್ಷ ಸಂಘಟನೆಗೆ ಮೈಸೂರಿನಲ್ಲಿ ಸಭೆ ಕರೆದಿರುವ ಕರ್ನಾಟಕ ರಾಜ್ಯ ಉಸ್ತುವಾರಿ ಅರಣ್ ಸಿಂಗ್, ಚಾಮುಂಡಿ ತಾಯಿಯ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕೃತ ಹಾಗೂ ಅನಧಿಕೃತವಾಗಿ ಯಾರ ಜೊತೆಯಲ್ಲೂ ಹೊಂದಾಣಿಕೆ ಇಲ್ಲ. ಜೆಡಿಎಸ್ ಕುಗ್ಗುತ್ತಿದೆ. ಬಿಜೆಪಿ ಬೆಳೆಯುತ್ತಿದೆ. 2023ಕ್ಕೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದೇ ನಮ್ಮ ಗುರಿ. ಜೆಡಿಎಸ್ ಮತ್ತು ಕಾಂಗ್ರೆಸ್ ಎರಡು ಸರ್ಕಾರವನ್ನು ಜನ ನೋಡಿದ್ದಾರೆ. ನಾವು ಯಾರ ಜೊತೆಯಲ್ಲು ಮೈತ್ರಿ ಮಾಡಿಕೊಳ್ಳುವುದಿಲ್ಲ. ಇಡೀ ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷ ನಮ್ಮದು. ಆದ್ದರಿಂದ ನಾವು ಯಾರ ಜೊತೆಯಲ್ಲು ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಬಿ.ಎಸ್.ಯಡಿಯೂರಪ್ಪ ದೊಡ್ಡ ನಾಯಕ. ಅವರಿಗೆ ಸಂಘಟನೆಯ ಬಗ್ಗೆ ಅನುಭವ ಇದೆ. ಅವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಈಗ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಪರಿಪೂರ್ಣವಾಗಿ ಕೆಲಸ ಮಾಡುತ್ತಿದೆ ಎಂದರು.
ಹಳೇ ಮೈಸೂರು ಭಾಗದಲ್ಲಿ ಮುಂದಿನ ಚುನಾವಣೆಗೆ ಅತಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಪಕ್ಷದ ಸಂಘಟನೆ ಈ ಭಾಗದಲ್ಲಿ ಚೆನ್ನಾಗಿ ಆಗುತ್ತಿದೆ. ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚುವುದು ಸಿಎಂ ಅವರ ಪರಮಾಧಿಕಾರ. ಇದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಹಂಚಿಕೆಯಾದ ಖಾತೆಗಳಲ್ಲಿ ಸಚಿವರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಒತ್ತಡ ಇಲ್ಲ. ಸಿಎಂ ಎಲ್ಲವನ್ನೂ ಚೆನ್ನಾಗಿ ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.