ಮೈಸೂರು: ಯಾವುದೇ ಗೊಡ್ಡು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲವೆಂದು ತಮ್ಮ ವಿರುದ್ಧದ ಪ್ರತಿಪಕ್ಷದ ಹೇಳಿಕೆಗಳಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿರುಗೇಟು ನೀಡಿದರು.
ಇಂದು ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನನ್ನು ಪ್ರತಿಪಕ್ಷಗಳು ಏಕೆ ಟಾರ್ಗೆಟ್ ಮಾಡುತ್ತಿವೆ ಎಂಬುದನ್ನು ಅವರನ್ನೇ ಕೇಳಬೇಕು. ಈ ವಿಚಾರದಲ್ಲಿ ನಾನು ಯಾವುದೇ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಹಿರಿಯರು ನನಗೆ ಸಂಘಟನಾತ್ಮಕ ಶಕ್ತಿ ಸ್ಥಾನ ಕೊಟ್ಟಿದ್ದಾರೆ. ಅದನ್ನು ಉಪಯೋಗಿಸಿಕೊಂಡು ಪಕ್ಷ ಸಂಘಟನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಇತ್ತೀಚೆಗೆ ಸಿನಿಮಾ ರಂಗದ ಕೆಲವರು ಡ್ರಗ್ಸ್ ಮಾಫಿಯಾದಲ್ಲಿ ಸಿಲುಕುತ್ತಿರುವುದು ದೊಡ್ಡ ದುರಂತ. ಯಡಿಯೂರಪ್ಪ ಅವರ ಸರ್ಕಾರ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕುವ ಉದ್ದೇಶದಿಂದ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ಇಡೀ ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯವಾಗಬೇಕು. ಆ ರೀತಿ ಪೊಲೀಸರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ಡ್ರಗ್ಸ್ ಮಾಫಿಯಾದಲ್ಲಿ ಬಿಜೆಪಿಯಾಗಲಿ ಅಥವಾ ಪಕ್ಷದ ಯಾವುದೇ ಮುಖಂಡರಾಗಲಿ ಅವರ ಜೊತೆ ಯಾವುದೇ ಸಂಬಂಧ ಹೊಂದಿಲ್ಲ. ಈ ಕುರಿತು ಚರ್ಚೆ ಆಗುತ್ತಿರುವುದರಲ್ಲಿ ಹುರುಳಿಲ್ಲ ಎಂದು ರಾಗಿಣಿ ಪ್ರಕರಣವನ್ನು ಉಲ್ಲೇಖಿಸಿ ವಿಜಯೇಂದ್ರ ಹೇಳಿದ್ರು.
ಇನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮಾಡಿರುವ ಆರೋಪದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ದಾಖಲಾತಿ ಇದ್ದರೆ ಬಿಡುಗಡೆ ಮಾಡಲಿ ಎಂದಷ್ಟೇ ಹೇಳಿದ್ರು.