ಮೈಸೂರು: ದಸರಾ ಸಂಭ್ರಮದಲ್ಲಿ ಪಾಲ್ಗೊಳ್ಳಲು ನಿಕಟಪೂರ್ವ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಆಹ್ವಾನಿಸಿದ್ದಾರೆ.
ಮೈಸೂರಿನಲ್ಲಿ ಕಳೆದ 2 ವರ್ಷ 4 ತಿಂಗಳ ಕಾಲ ಮೈಸೂರಿನ ಜಿಲ್ಲಾಧಿಕಾರಿಯಾಗಿ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಮನೆ ಮಾತಾಗಿದ್ದ ಅಭಿರಾಮ್ ಜಿ.ಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಎಸ್.ಟಿ. ಸೋಮಶೇಖರ್ ಅವರು ಆಹ್ವಾನಿಸಿದರು.
ಇತ್ತೀಚೆಗೆ ಮೈಸೂರಿನ ಐಎಎಸ್ ತರಬೇತಿ ಕೇಂದ್ರಕ್ಕೆ ನಿಯೋಜನೆಗೊಂಡಿರುವ ಮೈಸೂರಿನ ನಿಕಟಪೂರ್ವ ಜಿಲ್ಲಾಧಿಕಾರಿಯಾಗಿರುವ ಅಭಿರಾಮ್ ಜಿ.ಶಂಕರ್ ಅವರನ್ನು ದಸರಾ ಸಮಾರಂಭಕ್ಕೆ ಆಗಮಿಸಿ ಪಾಲ್ಗೊಳ್ಳಬೇಕೆಂದು ದೂರವಾಣಿ ಮುಖಾಂತರ ಸಚಿವರು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಭಿರಾಮ್ ಅವರು, ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳು, ಮಾಧ್ಯಮ ಮಿತ್ರರು ಹಾಗೂ ಸಾರ್ವಜನಿಕರ ಸಹಕಾರವನ್ನು ಸ್ಮರಿಸಿಕೊಂಡರು. ಆದರೆ ಕಾರ್ಯಭಾರ ಒತ್ತಡದಿಂದ ತಮಗೆ ದಸರಾ ಮಹೋತ್ಸವಕ್ಕೆ ಆಗಮಿಸಲು ಆಗುತ್ತಿಲ್ಲವಾದರೂ, ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿ ಆತಂಕ ಎದುರಾಗದೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಸಾಂಪ್ರದಾಯಿಕವಾಗಿ ನಿರ್ವಿಘ್ನವಾಗಿ ನೆರವೇರಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.