ಮೈಸೂರು:ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಕುಟುಂಬ ಜಾತಿ ರಾಜಕಾರಣ ಮಾಡುವುದಿಲ್ಲ. ಆದ್ದರಿಂದ ಸಂಕುಚಿತ ಮನೋಭಾವನೆ ಮತ್ತು ಜಾತಿಯ ವ್ಯಾಮೋಹ ಬಿಟ್ಟು ಉತ್ತಮವಾಗಿ ಕೆಲಸ ಮಾಡುತ್ತಿರುವ ಸಾ.ರಾ.ಮಹೇಶ್ ಅವರನ್ನು ಬೆಂಬಲಿಸಬೇಕು. 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಅಧಿಕಾರಕ್ಕೆ ಬರಲಿದ್ದು ಮಹೇಶ್ ಮತ್ತೆ ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.
ಭೇರ್ಯ ಗ್ರಾಮದಲ್ಲಿ ಏತ ನೀರಾವರಿ ಕಾಮಗಾರಿಗಳಿಗೆ ಹಣ ಬಿಡುಗಡೆ, ಸಾಲಿಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿದ್ದಕ್ಕಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲೂ ಸಾ ರಾ ಮಹೇಶ್ರನ್ನು ಸೋಲಿಸಬೇಕೆಂಬ ಉದ್ದೇಶದಿಂದ ಜೆಡಿಎಸ್‌ನವರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದರು ಎಂದು ಆರೋಪಿಸಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಸಾ.ರಾ. ಮಹೇಶ್ ಅವರನ್ನು ಸೋಲಿಸಲು ದೊಡ್ಡಮಟ್ಟದಲ್ಲಿ ಚಿತಾವಣೆ ನಡೆದಿದೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅವರ ಗೆಲುವಿಗೆ ಶ್ರಮಿಸಬೇಕು ಎಂದರು.