ಮೈಸೂರು:ನನಗೆ ರಾಜಕೀಯ ಚೆನ್ನಾಗಿ ಅರ್ಥವಾಗುತ್ತದೆ. ಆದರೆ ನನ್ನಿಂದ ರಾಜಕೀಯ ಮಾಡಲು ಬರುವುದಿಲ್ಲ. ಆದ್ದರಿಂದ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ನಾನು ರಾಜಕಾರಣಕ್ಕೆ ಬರುವುದಿಲ್ಲ. ಆದರೆ ಯದುವೀರ್ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದರು.
ಜುಲೈ 18ಕ್ಕೆ ಮೈಸೂರಿನ ಆಧುನಿಕ ಹರಿಕಾರ ಎಂದು ಖ್ಯಾತಿ ಪಡೆದಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಆಚರಣೆ ಅರಮನೆಯ ದರ್ಬಾರ್ ಹಾಲ್ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಮಾನ್ಯ ರಾಜ್ಯಪಾಲರು ಉದ್ಘಾಟಿಸಲಿದ್ದು, ಇದೇ ಕಾರ್ಯಕ್ರಮ ಜುಲೈ 20ರಂದು ಬೆಂಗಳೂರು ಅರಮನೆಯಲ್ಲಿ ನಡೆಯಲಿದೆ. ಜಯಂತಿಯನ್ನು ಸರ್ಕಾರವೇ ಮಾಡಿದರೆ ಸಂತೋಷ. ಇಲ್ಲ ಎಂದರೆ ನಾವೇ ಮಾಡುತ್ತೇವೆ ಎಂದು ತಿಳಿಸಿದರು.