ಮೈಸೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇಂದು ಬೆಳಿಗ್ಗೆ ಸಿದ್ದರಾಮನಹುಂಡಿಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಮಾಜಿ ಸಿಎಂ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಸರ್ವ ಜಾತಿಯ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.