ಮೈಸೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಗಳ ಮೇಲೆ ಐಟಿ ದಾಳಿ ನಡೆಸಲು ಪ್ರಧಾನಿ ಮೋದಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲಾಖೆಯನ್ನ ಸಜ್ಜು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ನಗರದಲ್ಲಿ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮುಂದೆ ಮೋದಿ - ಅಮಿತ್ ಶಾ ಅವರ ಆಟ ನಡೆಯುವುದಿಲ್ಲ. ಇದೆಕ್ಕೆಲ್ಲ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿದರು.
ಕೇಂದ್ರ ಸರ್ಕಾರ ಚುನಾವಣೆ ಆಯೋಗ, ಸಿಬಿಐ, ಇಡಿ, ಸುಪ್ರೀಂಕೋಟ್೯ ಸೇರಿದಂತೆ ಎಲ್ಲ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಆದ್ದರಿಂದ ಅವುಗಳ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ. ಸಮ್ಮಿಶ್ರ ಸರ್ಕಾರ ಕೆಡವಲು ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲಕ್ಕಾಗಿ ₹ 500-700 ಕೋಟಿ ಖರ್ಚು ಮಾಡಿದ್ದಾರೆ. ಇದರ ಮೇಲೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ದುರುದ್ದೇಶದಿಂದ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.