ಮೈಸೂರು: 6 ತಿಂಗಳ ಹಿಂದೆಯೇ ಕೋರ್ ಕಮಿಟಿ ಸಭೆಯಲ್ಲಿ ಒಂದೂವರೆ ವರ್ಷ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಪೂರೈಸಿರುವ ಎಲ್ಲರಿಗೂ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳ ಪರಿಶೀಲನೆಗೆ ಹೊರಡುವ ಮುನ್ನ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಒಂದೂವರೆ ವರ್ಷ ಈಗಾಗಲೇ ನಿಗಮ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡಿರುವ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ 6 ತಿಂಗಳ ಹಿಂದೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.
ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ: ರಾಜ್ಯದಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ ಎಂಬ ಆರೋಪ ಸರಿಯಲ್ಲ. ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲೆಯ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನೆರೆ ಹಾನಿ ಪೀಡಿತ ಪ್ರದೇಶದಲ್ಲಿ ನಾನು ಸೇರಿದಂತೆ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.