ಮೈಸೂರು:ಶಕ್ತಿಧಾಮದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ನಟ ಶಿವರಾಜ್ ಕುಮಾರ್ ದಂಪತಿ ಭಾಗವಹಿಸಿದ್ದು, ಧ್ವಜಾರೋಹಣ ಕಾರ್ಯಕ್ರಮವನ್ನು ಗೀತಾ ಶಿವರಾಜ್ ಕುಮಾರ್ ನೆರವೇರಿಸಿದರು.
ಬನ್ನಿ ಮಂಟಪದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್ ಟಿ ಸೋಮಶೇಖರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಹರ್ ಘರ್ ತಿರಂಗಾ ಅಭಿಯಾನ ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 100 ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, “ವಿವೇಕ” ಯೋಜನೆಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿದ್ಯಾನಿಧಿ ಯೋಜನೆಯನ್ನು ನೇಕಾರರ ಮಕ್ಕಳಿಗೆ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. 10 ರಿಂದ 12 ಸಾವಿರ ನೇಕಾರರ ಮಕ್ಕಳಿಗೆ, 50 ಸಾವಿರ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.