ಶಿವಮೊಗ್ಗ: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗಾವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರಿಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವರ್ಚುಯಲ್ ಕಾರ್ಯಕ್ರಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ಪ್ರವಾಸೋದ್ಯಮದ ಪ್ರಾಮುಖ್ಯತೆ ಗಮದಲ್ಲಿರಿಸಿಕೊಂಡು ಜಿಲ್ಲೆಯ ಭರಣಾಪುರ ಹಾಗೂ ಮದಭಾವಿ ಗ್ರಾಮಗಳಲ್ಲಿನ ಸುಮಾರು 727 ಎಕರೆ ಜಮೀನಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ನಿಂಬೆ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು, ಒಣ ದ್ರಾಕ್ಷಿ ಮತ್ತು ನಿಂಬೆ ಹಣ್ಣನ್ನು ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ. ವಿಮಾನ ನಿಲ್ದಾಣ ಪ್ರಾರಂಭದಿಂದ ಈ ಎಲ್ಲಾ ಚಟುವಟಿಕೆಗಳಿಗೆ ಹೆಚ್ಚಿನ ಮಾರುಕಟ್ಟೆ ಲಭ್ಯವಾಗಲಿದೆ ಎಂದರು.