ಶಿವಮೊಗ್ಗ: ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಎಂದು ಸೂಚನೆ ಕೊಟ್ಟಿದ್ದೇನೆ. ಅರ್ಜಿ ಹಾಕಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅದರಿಂದ ಯಾರಿಗೂ ಅನಾನುಕೂಲ ಉಂಟಾಗುವುದಿಲ್ಲ ಎಂದರೆ ಮತ್ತೊಮ್ಮೆ ಅನುಮತಿ ನೀಡೋಣ. ಸದ್ಯಕ್ಕೆ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸುತ್ತಿರುವವರು ಹಾಗೂ ಅನುಮತಿ ಇಲ್ಲದೆ ಕಲ್ಲು ಗಣಿಗಾರಿಕೆ ಮಾಡುತ್ತಿರುವವರು ತಕ್ಷಣವೇ ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದರು.
ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಕೆಆರ್ಎಸ್ ಜಲಾಶಯಕ್ಕೆ ಹಾನಿ ಉಂಟಾಗುತ್ತಿದೆ. ಹಾಗಾಗಿ ಅಲ್ಲಿ ಗಣಿಗಾರಿಕೆ ನಡೆಸದಂತೆ ಸೂಚನೆ ನೀಡಿದ್ದೇನೆ, ಆದರೂ ಅಲ್ಲಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರು.
ರಾಜ್ಯ ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಅದಕ್ಕೆ ಜಲ್ಲಿ ಬೇಕು. ಕಾನೂನಿನ ಚೌಕಟ್ಟಿನಲ್ಲಿ ಜಲ್ಲಿ ಸರಬರಾಜು ಮಾಡುವುದಕ್ಕೆ ಯಾವುದೇ ತೊಂದರೆ ಇಲ್ಲ, ಆದರೆ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದು ತಿಳಿಸಿದರು.
ಭೋವಿ ಸಮುದಾಯದವರು ಸುತ್ತಿಗೆಯಿಂದ ಕಲ್ಲುಪುಡಿ ಮಾಡಿ ಮಾರಾಟ ಮಾಡುತ್ತಾರೆ. ಹಾಗಾಗಿ ಅದರಿಂದ ಸಮಸ್ಯೆ ಅಥವಾ ಅನಾಹುತಗಳು ಆಗುವುದಿಲ್ಲ. ಶ್ರೀಸಾಮಾನ್ಯನಿಗೆ, ಕಟ್ಟಡ ಕಾರ್ಮಿಕರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಜಲ್ಲಿ ಪೂರೈಕೆ ಮಾಡಬೇಕು ಎಂದು ಸಿಎಂ ಸೂಚಿಸಿದರು.
ಇದನ್ನೂ ಓದಿ:ಸ್ಫೋಟ ಪ್ರಕರಣದಲ್ಲಿ ಯಾರೇ ಅಪರಾಧಿಗಳಾಗಿದ್ರೂ ಶಿಕ್ಷೆ ಅನುಭವಿಸಲೇಬೇಕು; ಸಿ.ಎಂ. ಬಿಎಸ್ವೈ
ನಿನ್ನೆ ನೀಡಿರುವ ಹೇಳಿಕೆಯನ್ನು ಅಪಾರ್ಥ ಮಾಡಿಕೊಂಡು ಕೆಲವು ಮಾಧ್ಯಮಗಳು ಸುದ್ದಿ ಬಿತ್ತರಿಸಿವೆ. ಅಕ್ರಮ ಮಾಡುತ್ತಿರುವವರನ್ನು ಸಕ್ರಮ ಮಾಡಿ ಎಂದು ತಿಳಿಸಿಲ್ಲ. ಅಕ್ರಮ ಮಾಡುತ್ತಿರುವವರು ತಕ್ಷಣ ನಿಲ್ಲಿಸಬೇಕು, ನಂತರ ಅರ್ಜಿಗಳನ್ನು ಹಾಕಿ ಅಗತ್ಯವಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ಪರವಾನಗಿ ಪಡೆದುಕೊಳ್ಳಬೇಕು ಎಂದು ಹೇಳಿದ್ದೇನೆ. ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದರು.
ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಅಪರಾಧ. ಈ ಕುರಿತು ತನಿಖೆ ನಡೆಸಿ ಈ ಪ್ರಕರಣದಲ್ಲಿ ಭಾಗಿಯಾದವರನ್ನು ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಇಂದು ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆ ಮುಂದೂಡಿಕೆ
ಜನವರಿ 26 ರಂದು ರೈತರ ಪ್ರತಿಭಟನೆ ಕುರಿತು ಮಾತನಾಡಿದ ಸಿಎಂ ಬಿಎಸ್ವೈ, ರೈತರ ಪ್ರತಿಭಟನೆಗೆ ನಮ್ಮ ಅಭ್ಯಂತರ ಇಲ್ಲ, ಶಾಂತ ರೀತಿಯಿಂದ ಪ್ರತಿಭಟನೆ ಮಾಡಲಿ. ಭಾರತೀಯ ಜನತಾ ಪಕ್ಷ ರೈತರ ಪರವಾಗಿರುವ ಸರ್ಕಾರ. ಹೋರಾಟ ಮಾಡುವುದಾದರೆ ಶಾಂತ ರೀತಿಯಿಂದ ಹೋರಾಟ ಮಾಡಲಿ ಎಂದರು.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಆರೋಪಿಗಳನ್ನು ಬಂಧಿಸಿದ್ದು, ಮೃತರಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.