ಶಿವಮೊಗ್ಗ:2021ರ ಡಿಸೆಂಬರ್ ಅಂತ್ಯದ ವೇಳೆಗೆ ಶಿವಮೊಗ್ಗದ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣವಾಗಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
2021ರ ಡಿಸೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಭರವಸೆ - ಶಿವಮೊಗ್ಗ ನ್ಯೂಸ್
ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿ 2021ರ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣವಾಗಲಿದೆ. 2022 ರ ಜನವರಿ ಅಥವಾ ಫೆಬ್ರವರಿಯಲ್ಲಿ ವಿಮಾನಗಳು ಹಾರಾಟ ನಡೆಸುತ್ತವೆ ಎಂದು ಮುಖ್ಯಮಂತ್ರಿ ಯಡಿಯೂಡಿಯೂರಪ್ಪ ತಿಳಿಸಿದ್ದಾರೆ.
ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಇಂದು ವೀಕ್ಷಣೆ ಮಾಡಿದ ನಂತರ ಮಾತನಾಡಿದ ಅವರು, 2022 ರ ಜನವರಿ ಅಥವಾ ಫೆಬ್ರವರಿಯಲ್ಲಿ ವಿಮಾನಗಳು ಹಾರಾಟ ನಡೆಸುತ್ತವೆ. ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ನಡೆಯುತ್ತಿದೆ. ಮೊದಲು 2050 ಮೀಟರ್ ರನ್ ವೇಗೆ ಅನುಮೋದನೆ ನೀಡಲಾಗಿತ್ತು. ಈಗ ಇಲ್ಲಿ ಏರ್ ಬಸ್ಗಳಿಗೂ ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3,200 ಮೀಟರ್ಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕಾಗಿಯೇ ಹೆಚ್ಚುವರಿಯಾಗಿ 75 ಕೋಟಿ ರೂ ಬೇಕಾಗುತ್ತದೆ. ಇದಕ್ಕಾಗಿ ಮುಂದಿನ ಬಜೆಟ್ನಲ್ಲಿ ಹಣ ಮಂಜೂರು ಮಾಡಲಾಗುವುದು ಎಂದರು.
ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದು ಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು. ವಿಮಾನ ನಿಲ್ದಾಣದ ಪ್ರಾರಂಭದಿಂದ ಜಿಲ್ಲೆಯ ಸುತ್ತಮುತ್ತ ಜಿಲ್ಲೆಗಳು ಅಭಿವೃದ್ಧಿಯಾಗುತ್ತದೆ. ಅನೇಕ ಕೈಗಾರಿಕೆಗಳು ಸಹ ಆಗಮಿಸುತ್ತವೆ ಎಂದು ತಿಳಿಸಿದರು.
ಉಡಾನ್ ಯೋಜನೆಯಡಿ ಅಭಿವೃದ್ಧಿಗೆ ಮನವಿ:ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನ ಸಾಮಾನ್ಯರಿಗೂ ಅನುಕೂಲಕರವಾಗಲಿದೆ ಎಂದರು.