ಶಿವಮೊಗ್ಗ:ಕಾಂಗ್ರೆಸ್ನಿಂದ ನಡೆದ ಜನಧ್ವನಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದರು. ಇದೇ ವೇಳೆ ಜಿಲ್ಲೆಯ ಬಗರ್ ಹುಕುಂ, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳನ್ನಿಟ್ಟುಕೊಂಡು ಶಿವಮೊಗ್ಗದ ಕಾಗೋಡಿನಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಘೋಷಣೆ ಮಾಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಭೋವಿ ಸಮುದಾಯ ಭವನದ ಎದುರು ಆಯೋಜಿಸಲಾಗಿದ್ದ ಜನಧ್ವನಿ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದ ಡಿಕೆಶಿ, ಕ್ವಿಟ್ ಇಂಡಿಯಾ ದಿನಾಚರಣೆಯ ಅಂಗವಾಗಿ ಆ.9 ರಂದು ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಬಗರ್ ಹುಕುಂ, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಮಟ್ಟದ ಹೋರಾಟ ರೂಪಿಸಲಾಗುತ್ತಿದೆ. ರಾಜ್ಯಮಟ್ಟದ ನಾಯಕರೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈಶ್ವರಪ್ಪನವರಿಗೆ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ಪಕ್ಷ ಬೇಡಿಕೆ ಇಟ್ಟಿರಲಿಲ್ಲ. ಸಂತೋಷ್ ಪಾಟೀಲ್ ಸಾವಿಗೆ ನ್ಯಾಯಕೊಡಿ ಎಂದು ಆಗ್ರಹಿಸಲಾಗಿತ್ತು. ಆದರೆ, ಈಶ್ವರಪ್ಪನವರನ್ನು ಸಿಎಂ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಅವರನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ರು. ಭ್ರಷ್ಟಾಚಾರ ತಡೆಗೆ ಕೇಸ್ ಅನ್ನು ಹಾಕಬೇಕಿತ್ತು. ಅದನ್ನು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.