ದ.ಕನ್ನಡ/ಶಿವಮೊಗ್ಗ/ಮೈಸೂರು:ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆ ಅವಾಂತರ ಸೃಷ್ಟಿಸುತ್ತಿದೆ. ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಜನವಸತಿ ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಪ್ರಯಾಣಿಕರು ಪರದಾಡುವಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯೂ ಜೋರು ಮಳೆ ಸುರಿಯುತ್ತಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಿಗೆ ಇಂದು (ಮೇ19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದ.ಕನ್ನಡ, ಶಿವಮೊಗ್ಗದಲ್ಲಿ ಭಾರಿ ಮಳೆ ಇದನ್ನೂ ಓದಿ:ತುಮಕೂರು: ಹೊಳೆಯಂತಾದ ರಸ್ತೆ, ತುಂಬಿ ಹರಿವ ಹಳ್ಳಕೊಳ್ಳ, ಗ್ರಾಮೀಣ ಶಾಲೆಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಅಂಗನವಾಡಿಗಳಿಗೂ ಸಹ ರಜೆ ಸಿಕ್ಕಿದೆ.
ಮೈಸೂರಲ್ಲೂ ರಜೆ:ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡಿರುವ ದಿನದ ಕರ್ತವ್ಯವನ್ನು ಮುಂದಿನ ರಜಾದಿನಗಳಲ್ಲಿ ನಿರ್ವಹಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಜಿಲ್ಲೆಯಾದ್ಯಂತ ಒಂದರಿಂದ 10ನೇ ತರಗತಿವರೆಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್:ರಾಜ್ಯದ ಹಲವೆಡೆ ಮಳೆ ಇನ್ನೂ 4 ದಿನ ಮುಂದುವರೆಯಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಇಂದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಹೈಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಿಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.