ಶಿವಮೊಗ್ಗ:ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಬೆಳೆ ಹಾನಿ ಆಗಿರುವ ಬಗ್ಗೆ ಅಂದಾಜಿಸಲಾಗಿದ್ದು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದರು. ಇಂದು ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಒಂದು ವಾರ ಕಾಲ ಸುರಿದ ಅಕಾಲಿಕ ಮಳೆಯಿಂದಾಗಿ ನಗರ ಪ್ರದೇಶದಲ್ಲಿ ನೀರು ಮನೆಗಳಿಗೆ ನುಗ್ಗಿ ವ್ಯಾಪಕ ಹಾನಿ ಉಂಟಾಗಿದೆ. ಇದೇ ರೀತಿ ಮೆಕ್ಕೆಜೋಳ ಹಾಗೂ ಭತ್ತದ ಬೆಳೆಗಳಿಗೂ ಹಾನಿ ಉಂಟಾಗಿದೆ. ಸುಮಾರು 3ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. 2139ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. 24ಶಾಲೆಗಳು ಹಾಗೂ 17ಅಂಗನವಾಡಿ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ಬೆಳೆ ಹಾನಿಗೆ ಪ್ರಸ್ತುತ ಹೆಕ್ಟೇರ್‍ಗೆ 13ರಿಂದ 15ಸಾವಿರ ರೂ. ಪರಿಹಾರ ಒದಗಿಸಲಾಗುತ್ತಿದೆ. ಇದನ್ನು ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ರೈತರಿಗೆ ಪರಿಹಾರ:ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಮಳೆಯಿಂದ ಶಿವಮೊಗ್ಗ ನಗರದ 7 ವಾರ್ಡ್‍ಗಳಲ್ಲಿ ನೀರು ತುಂಬಿ ಹಾನಿ ಉಂಟಾಗಿದೆ. ಪ್ರತಿ ವರ್ಷ ಮಳೆಯಿಂದ ತೊಂದರೆಗೊಳಗಾಗುವ ಪ್ರದೇಶಗಳನ್ನು ಗುರುತಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅತಿವೃಷ್ಟಿಯಿಂದ ಶಿಕಾರಿಪುರ ಹಾಗೂ ಸೊರಬ ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ಉಂಟಾಗಿದೆ. ಕೆರೆಕಟ್ಟೆ ಒಡೆದು ಭತ್ತ ಹಾಗೂ ಅಡಿಕೆ ತೋಟಗಳಿಗೂ ವ್ಯಾಪಕ ಹಾನಿ ಉಂಟಾಗಿದ್ದು, ರೈತರಿಗೆ ಸೂಕ್ತ ಪರಿಹಾರವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ಶಿವಮೊಗ್ಗ ನಗರದ ಕೋರ್ಟ್ ಮುಂಭಾಗ, ಬಾಪೂಜಿ ನಗರ, ಹೊಳೆಹೊನ್ನೂರು ರಸ್ತೆ, ಬಿ.ಬೀರನಹಳ್ಳಿಯಲ್ಲಿ ಕೆರೆ ಒಡೆದು ಹಾನಿಗೀಡಾಗಿರುವ ರೈತರ ಜಮೀನು, ನ್ಯೂ ಮಂಡ್ಲಿ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಅಶೋಕ ನಾಯ್ಕ್, ಡಿ.ಎಸ್.ಅರುಣ್, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಸ್ಮಾರ್ಟ್‍ಸಿಟಿ ಮ್ಯಾನೇಜಿಂಗ್ ಡೈರೆಕ್ಟರ್ ಚಿದಾನಂದ ವಟಾರೆ, ಉಪವಿಭಾಗಾಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಓದಿ:ಕಾಯಕವೇ ಕೈಲಾಸ:10 ಕಿ.ಮೀ ನಡೆದು ಬುಡಕಟ್ಟು ಜನರ ಆರೋಗ್ಯ ತಪಾಸಣೆ ನಡೆಸಿದ ವೈದ್ಯ ಸಿಬ್ಬಂದಿ!