ಶಿವಮೊಗ್ಗ: ಒಂದು ದೇಶ ಸಮೃದ್ಧಿಯಾಗಿರಬೇಕಾದ್ರೆ, ಆ ದೇಶ ಆರೋಗ್ಯಕರವಾಗಿರಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ನರೇಂದ್ರ ಮೋದಿರವರು ದೇಶದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಆಯುಷ್ಮಾನ್ ಭಾರತ್ ಯೋಜನೆಗೆ ಒಂದು ವರ್ಷ: ಜಾಥಾಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ
ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆಸಿದ ಜಾಥಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿಸಿದರು.
ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆಸಿದ ಜಾಥಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಸಂಸದರು, ನಮ್ಮ ಭಾರತದಂತಹ ದೇಶದಲ್ಲಿ ಇನ್ನೂ ಕಡು ಬಡವರಿದ್ದಾರೆ. ಅವರಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಮೋದಿಯವರು ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ 5 ಲಕ್ಷದ ವರೆಗೆ ಹಾಗೂ ಎಪಿಎಲ್ ಕಾರ್ಡ್ದಾರರಿಗೆ ವರ್ಷಕ್ಕೆ 1.50 ಲಕ್ಷದ ವರೆಗೆ ರೂ. ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲೇ ಸುಮಾರು 7 ಸಾವಿರ ಕುಟುಂಬಗಳು 20 ಕೋಟಿ ರೂ.ನಷ್ಟು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಜಾಥದಲ್ಲಿ ಸಂಸದರಿಗೆ ಜಿಲ್ಲಾಧಿಕಾರಿ ಶಿವಕುಮಾರ್, ಡಿಹೆಚ್ಓ ರಾಜೇಶ್ ಸೂರಗಿಹಳ್ಳಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಮೆಗ್ಗಾನ್ ಆಸ್ಪತ್ರೆ ವರೆಗೂ ಸಾಗಿದ ಜಾಥದಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.