ತುಮಕೂರು:ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇರಳದ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದೆ. ವಿವಿಧ ದೇಶಗಳಲ್ಲಿ ಕಂಡುಬಂದಿರುವ ಹೊಸ ರೂಪಾಂತರಿ ತಳಿಯ ಬಗ್ಗೆ ಪ್ರಧಾನಿ, ಕೇಂದ್ರ ಆರೋಗ್ಯ ಸಚಿವರ ಸೂಚನೆ ಮೇರೆಗೆ ರಾಜ್ಯದಲ್ಲಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಶಾಲಾ ಕಾಲೇಜುಗಳ ಮೇಲೂ ನಿಗಾ ವಹಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಇರುವ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಬಗ್ಗೆ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದ್ರು.