ತುಮಕೂರು: ಜಿಲ್ಲೆಯ ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಬಸ್ ಮೇಲ್ಭಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದವರೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಓವರ್‌ಲೋಡ್ ಆಗಿದ್ದಕ್ಕೆ ಅಪಘಾತ ಸಂಭವಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳನ್ನು ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚವನ್ನೂ ಭರಿಸಲಾಗುವುದು ಎಂದು ಹೇಳಿದರು.