ತುಮಕೂರು:ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ಗೆ ಸೇರಿದ 'ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆ'ಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ, ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.. ಡಾ.ಜಿ ಪರಮೇಶ್ವರ್ ಒಡೆತನದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಕೂಡ ತಪಾಸಣೆ ಮುಂದುವರೆಸಿದ್ದಾರೆ. ಐಟಿ ಅಧಿಕಾರಿಗಳ ದಾಳಿಯನ್ನು ಖಂಡಿಸಿ ನಿನ್ನೆಯಿಂದಲೂ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ಇಂದು ತುಮಕೂರಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಟೌನ್ಹಾಲ್ ವೃತ್ತದವರೆಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಟೌನ್ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಪಕ್ಷದ ದಲಿತ ಮುಖಂಡರಾದ ವಾಲೆ ಚಂದ್ರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಇನ್ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.
ಇನ್ನು, ಐಟಿ ದಾಳಿ ಖಂಡಿಸಿ ದಲಿತ ಪರ ಸಂಘಟನೆಗಳು ಹಾಗೂ ಡಾ.ಜಿ ಪರಮೇಶ್ವರ್ ಅಭಿಮಾನಿ ಬಳಗದ ಸದಸ್ಯರು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.