ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ನಿಮಿತ್ತ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗಾಂಧೀಜಿ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್ ಚಾಲನೆ ನೀಡಿದರು.
ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗಾಂಧೀಜಿಯವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನ ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟದಲ್ಲಿ ಮಹಾತ್ಮ ಗಾಂಧೀಜಿಯವರು ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪೃಶ್ಯತೆ ನಿವಾರಣೆಗಾಗಿ ಗಾಂಧೀಜಿ ನಡೆಸಿದ ಆಂದೋಲನ, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಪ್ರದರ್ಶನವು ಇಂದಿನಿಂದ ಅ. 28ರ ವರೆಗೆ ನಡೆಯಲಿದೆ.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್, ಸತ್ಯ, ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಣದಾಯಕವಾಗಿದೆ. ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ ಯುವಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಕರ್ನಾಟಕದಲ್ಲಿ ಪ್ರವಾಸ ಮಾಡಿದ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳು ಇಂದು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬರುತ್ತಿದ್ದಾರೆ, ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬೇಕು ಎಂದು ಯುವಕರಿಗೆ ಸಲಹೆ ನೀಡಿದರು.