ಮೊರಾದಾಬಾದ್ (ಉತ್ತರ ಪ್ರದೇಶ):ಟ್ರಕ್, ಕಾರು ಹಾಗೂ ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಸರಣಿ ರಸ್ತೆ ಅಪಘಾತದಲ್ಲಿ 10 ಮಂದಿ ದುರ್ಮರಣ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯೋಗಿ
09:35 January 30
ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮೊರಾದಾಬಾದ್ ಜಿಲ್ಲೆಯ ಕುಂದಾರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ನಾನ್‌ಪುರದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟವಾದ ಮಂಜಿನಿಂದಾಗಿ ರಸ್ತೆಯಲ್ಲಿ ಬರುತ್ತಿರುವ ವಾಹನಗಳು ಸರಿಯಾಗಿ ಗೋಚರಿಸದೆ ಅವಘಡ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ವಾಹನಗಳನ್ನು ತೆರವುಗೊಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಯೋಗಿ
ಘಟನೆಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.