ನವದೆಹಲಿ: ತನ್ನ ರಕ್ಷಣೆಗಾಗಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನಿಯೋಜಿಸಲಾದ ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‌ಒ) ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾಳೆ.
ಜಿಲ್ಲಾ ಪೊಲೀಸರ ನೆರವಿನೊಂದಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖಾ ಅಧಿಕಾರಿಗೆ ಈ ಕುರಿತು ಪರಿಶೀಲನಾ ವರದಿಯನ್ನು ಸಲ್ಲಿಸುವಂತೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧರ್ಮೇಶ್ ಶರ್ಮಾ ಸೂಚಿಸಿದ್ದಾರೆ.
ಈ ಸಂಬಂಧ ಜುಲೈ 31 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ಈ ಬಗ್ಗೆ ತಿಳಿಸಿದ್ದಾರೆ. ಅರ್ಜಿಯಲ್ಲಿ ಆಕೆ ಮತ್ತು ಆಕೆಯ ಕುಟುಂಬದ ಸದಸ್ಯರು ಪಿಎಸ್‌ಒಗಳಿಂದ ಕಿರುಕುಳಕ್ಕೊಳಗಾಗಿದ್ದಾರೆ. ಒಂದು ಅರ್ಥದಲ್ಲಿ ಆಕೆ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದಾಳೆ. ಈ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
2017 ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದಾಗ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಆಕೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದರು. ಈ ಪ್ರಕರಣವನ್ನು ಉನ್ನಾವೊದಿಂದ ದೆಹಲಿಗೆ ವರ್ಗಾಯಿಸಲಾಗಿತ್ತು.
ಆಗಸ್ಟ್ 1, 2019 ರಂದು ನ್ಯಾಯಾಲಯ ಇವರ ಕುಟುಂಬಕ್ಕೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತೆ ಒದಗಿಸುವಂತೆ ಸೂಚಿಸಿತ್ತು.