ದಾವಣಗೆರೆ: ಸಂಸದ ಸಿದ್ದೇಶ್ವರ್ ಅವರಿಗೆ ಕೇಂದ್ರ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇಲ್ಲದ ಕಾರಣ ಸಂಪುಟದಿಂದ ಕೈ ಬಿಡಲಾಗಿತ್ತು ಎಂಬ ದಿನೇಶ್ ಗುಂಡೂರಾವ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನಕಲಿ ರೇಷನ್ ಕಾರ್ಡ್ ಹಾವಳಿ ತಡೆಗೆ ಕ್ರಮ ಕೈಗೊಳ್ಳಲು ಆಗದೇ ಸಾಮರ್ಥ್ಯ ಕಳೆದುಕೊಂಡಿದ್ದು ದಿನೇಶ್ ಗುಂಡೂರಾವ್. ಹಾಗಾಗಿ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು ಎಂಬುದನ್ನು ಮರೆತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಬೇರೆಯವರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಸಿದ್ದೇಶ್ವರ್ ಸಚಿವ ಸ್ಥಾನ ಬಿಟ್ಟುಕೊಟ್ಟಿದ್ದು. ಆದ್ರೆ, ದಿನೇಶ್ ಗುಂಡೂರಾವ್ ಸಿದ್ದೇಶ್ವರ್ ಸಾಮರ್ಥ್ಯ ಪ್ರಶ್ನಿಸಿದ್ದಾರೆ. ಮೊದಲು ನಿಮ್ಮ ಸಾಮರ್ಥ್ಯವೇನು ಎಂಬುದನ್ನು ತಿಳಿದುಕೊಳ್ಳಿ. ಸಿದ್ದೇಶ್ವರ್ ದಾವಣಗೆರೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜಯ ಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.