ಬೆಂಗಳೂರು:ಲೋಕಸಭೆ ಚುನಾವಣೆಯ ಪ್ರಚಾರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು, ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ರಾಷ್ಟ್ರ ನಾಯಕರಿಬ್ಬರು ರಾಜ್ಯದಲ್ಲಿ ಒಂದೇ ದಿನ ಪ್ರತ್ಯೇಕ ಕಡೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ.
ರಾಜ್ಯದಲ್ಲಿ ನಾಳೆ ಮೋದಿ, ರಾಹುಲ್ ರಣಕಹಳೆ
ರಾಷ್ಟ್ರ ರಾಜಕಾರಣದಲ್ಲಿ ರಾಜ್ಯ ಕೇಂದ್ರಬಿಂದುವಾಗಿ ಪರಿಣಮಿಸಿದೆ. ಲೋಕ ಸಮರದಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ 'ನಮೋ' ಮತ್ತು 'ರಾಗಾ' ಒಂದೇ ದಿನ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಮೈತ್ರಿ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಿದರೆ, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಕ್ಯಾಂಪೇನ್ ನಡೆಸಲಿದ್ದಾರೆ. ಬೆಳಗ್ಗೆ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕೋಲಾರದಲ್ಲಿ ಕೆ.ಎಚ್.ಮುನಿಯಪ್ಪ ಪರ ಮತಬೇಟೆ ಮಾಡುತ್ತಾರೆ. ಸಂಜೆ ಮೈಸೂರಿನ ಕೆ.ಆರ್.ನಗರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.
ರಾಹುಲ್‍ಗಾಂಧಿ ರಾಜ್ಯಕ್ಕೆ ಬರುವ ಕಾರಣ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೂ ತೆರಳಲಿದ್ದು ಮಧ್ಯಾಹ್ನ ಪಕ್ಷದ ಕ್ಯಾಂಡಿಡೇಟ್‌ಗಳ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅವರು ಬೃಹತ್ ಚುನಾವಣಾ ಪ್ರಚಾರದ ಭಾಷಣ ಮಾಡಲಿದ್ದಾರೆ.