ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಇಂದು ತಡೆ ನೀಡಿದೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ನಟ ತಮ್ಮನ್ನು ಪ್ರೀತಿಸುವವರಿಗೆ, ಬೆಂಬಲವಾಗಿ ನಿಂತವರಿಗೆ ಧನ್ಯವಾದ ತಿಳಿಸಿದ್ದಾರೆ. "ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು" ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಫೇಸ್‌ಬುಕ್ ಲೈವ್ನಲ್ಲಿ ವಿಡಿಯೋ ಮಾಡುವ ಸಂದರ್ಭದಲ್ಲಿ ಒಂದು ಸಮುದಾಯದ ಕುರಿತು ಆಕ್ಷೇಪಾರ್ಹ ಗಾದೆಮಾತು ಬಳಕೆ ಮಾಡಿದ್ದ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಎಫ್ಐಆರ್ಗೆ ಇಂದು ತಡೆ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:Upendra: ನಟ ಉಪೇಂದ್ರಗೆ ಹೈಕೋರ್ಟ್ ರಿಲೀಫ್; FIRಗೆ ತಡೆ
ಎಫ್ಐಆರ್ ವಿವರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ನಲ್ಲಿ, ಉಪೇಂದ್ರ ಸಾಮಾಜಿಕ ಜಾಲತಾಣದ ಕಾರ್ಯಕ್ರಮದ ನೇರಪ್ರಸಾರದಲ್ಲಿ ಮಾತನಾಡುವಾಗ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಇದರಿಂದ ಒಂದು ಸಮಾಜದ ಭಾವನೆಗಳಿಗೆ ಘಾಸಿ ಉಂಟಾಗಿದೆ. ನಟನಾಗಿ ಉಪೇಂದ್ರ ಅವರು ಎಲ್ಲರಿಗೂ ಮಾದರಿಯಾಗಿ ನಡೆದುಕೊಳ್ಳಬೇಕಿತ್ತು. ಈ ಸಂಬಂಧ ನಟನ ವಿರುದ್ಧ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ ಕಾಯ್ದೆ -1989) ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು.