ಕರ್ನಾಟಕ

karnataka

ETV Bharat / entertainment

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಆರೋಪ: ನಟ ಗಣೇಶ್​ ಉತ್ತರ ಪರಿಶೀಲಿಸುವವರೆಗೂ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಸೂಚನೆ - etv bharat kannada

ಬಂಡೀಪುರದ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ನಟ ಗಣೇಶ್. ಅರಣ್ಯ ಇಲಾಖೆಯ ನೊಟೀಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಗೋಲ್ಡನ್ ಸ್ಟಾರ್.

golden star ganesh
ಗಣೇಶ್

By

Published : Aug 21, 2023, 3:44 PM IST

Updated : Aug 21, 2023, 8:12 PM IST

ಬೆಂಗಳೂರು:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣ ಮಾಡುತ್ತಿರವ ಸಂಬಂಧ ಅರಣ್ಯ ಇಲಾಖೆ ನೀಡಿರುವ ನೊಟೀಸ್ ಪರಿಶೀಲನೆ ಮಾಡುವವರೆಗೂ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಾಮರಾಜನ ನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೋಟಿಸ್ ಪ್ರಶ್ನಿಸಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಅರಣ್ಯ ಇಲಾಖೆ ನೀಡಿರುವ ನೊಟೀಸ್‌ಗೆ ಅರ್ಜಿದಾರ ಗಣೇಶ್ ಮುಂದಿನ ಒಂದು ವಾರದಲ್ಲಿ ಉತ್ತರ ನೀಡಬೇಕು. ಈ ಉತ್ತರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲನೆ ನಡೆಸಿ ವಿಚಾರಣೆ ಪೂರ್ಣಗೊಳಿಸಿಬೇಕು ಎಂದು ಸೂಚನೆ ನೀಡಿದೆ.

ಆದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯಲ್ಲಿಯೂ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಿಸಬಾರದು. ಹಾಗೂ ಅರಣ್ಯ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ?ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಟ ಗಣೇಶ್ ಜಮೀನು ಖರಿಸಿದ್ದರು. ಈ ಜಮೀನಿನಲ್ಲಿ ತೋಟದ ಮನೆ ಕಟ್ಟುವುದಕ್ಕೆ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಮನವಿ ಕುರಿತು ಪರಿಶೀಲನೆ ನಡೆಸಿದ್ದ ಅರಣ್ಯ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ತಾತ್ಕಾಲಿಕವಾದ ವಾಸದ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ್ದರು. ಜೊತೆಗೆ, ಗಣೇಶ್ ಅವರು ತಾತ್ಕಾಲಿಕ ವಾಸದ ಮನೆ ನಿರ್ಮಾಣ ಮಾಡಲಾಗುವುದು, ಯಾವುದೇ ರೀತಿಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಂದಾಗುವುದಿಲ್ಲ, ಅಲ್ಲದೆ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಹಾಗೂ ವನ್ಯ ಜೀವಿಗಳಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗುವಂತಹ ಕ್ರಮಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದು ಮುಚ್ಚಳಿಕೆಯನ್ನೂ ಬರೆದುಕೊಟ್ಟಿದ್ದರು.

ಆದರೆ ನಂತರದಲ್ಲಿ ಗಣೇಶ್‌ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅರಣ್ಯ ಇಲಾಖೆ ಗಣೇಶ್‌ಗೆ ನೊಟೀಸ್ ಜಾರಿ ಮಾಡಿತ್ತು. ಅಲ್ಲದೇ ಮುಂದಿನ ಆದೇಶದವರೆಗೂ ಕಾಮಗಾರಿ ನಡೆಸದಂತೆ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿದ ಗಣೇಶ್​ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ:ಬಂಡೀಪುರದಲ್ಲಿ ನಟ ಗಣೇಶ್ ಕಾಂಪೌಂಡ್ ಕಾಮಗಾರಿಗೆ ಆಕ್ಷೇಪ; ನೊಟೀಸ್ ಜಾರಿ

Last Updated : Aug 21, 2023, 8:12 PM IST

ABOUT THE AUTHOR

...view details