90 ವರ್ಷಗಳ ಇತಿಹಾಸ ಇರುವ ಕನ್ನಡ ಚಿತ್ರರಂಗಕ್ಕೆ ದಶಕಗಳು ಕಳೆದರು ಕರ್ನಾಟಕದಲ್ಲಿ ಬೃಹತ್ ಮಟ್ಟದ ಫಿಲ್ಮ್ ಸಿಟಿ ನಿರ್ಮಾಣ ಆಗಿಲ್ಲ ಎಂಬ ಕೂಗು ಬ್ಲ್ಯಾಕ್ ಆ್ಯಂಡ್ ವೈಟ್ ಕಾಲದಿಂದಲೂ ಕೇಳಿ ಬರುತ್ತಿದೆ. ಆದರೆ ಕನ್ನಡ ಚಿತ್ರರಂಗಕ್ಕೆ ಫಿಲ್ಮ್ ಸಿಟಿ ಎಂಬುದು ಮರೀಚಿಕೆಯಾಗಿಯೇ ಇದೆ. ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಕನ್ನಡದ ಖ್ಯಾತ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ ನಿರ್ಮಾಪಕ ಕೃಷ್ಣೇಗೌಡ, ನಿರ್ಮಾಪಕರು, ತಂತ್ರಜ್ಞಾನರು, ಕಥೆಗಾರರು ಸೇರಿದಂತೆ 654 ಜನ ಗಂಧದಗುಡಿ ಗೃಹ ನಿರ್ಮಾಣ ವೇದಿಕೆ ಎಂದು ತಂಡ ಮಾಡಿಕೊಂಡಿದ್ದಾರೆ.
ಈ ಗಂಧದಗುಡಿ ಗೃಹ ನಿರ್ಮಾಣ ವೇದಿಕೆಯಿಂದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಇಂದು ನಿರ್ದೇಶಕ ಹಾಗೂ ನಿರ್ಮಾಪಕ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ಕಲಾವಿದರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.
ಚಿತ್ರರಂಗದ ಪ್ರಮುಖರ ಜೊತೆ ಸುದೀರ್ಘ ಸಮಯದ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಬಾರಿಯ ಬಜೆಟ್ ಮುಗಿದ ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚಂದನವನಕ್ಕೆ ಚಿತ್ರನಗರಿ ನಿರ್ಮಾಣಕ್ಕಾಗಿ ಮತ್ತೊಂದು ಸುತ್ತಿನ ಸುದೀರ್ಘ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.