ಬೆಳಗಾವಿ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಖಾಸಗೀಕರಣ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ನಾಳೆ ಕರ್ನಾಟಕ ಬಂದ್: ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ನಿರ್ಧಾರ
ನಾಳೆ ಬಂದ್ ಬೆಂಬಲಿಸಿ ಬೆಳಗಾವಿಯಲ್ಲಿ ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ತಿಳಿಸಿದ್ದಾರೆ.
ಈ ಸಂಬಂಧ ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ನಾಳೆ ಬಂದ್ ಬೆಂಬಲಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ಡಿಸಿ ಕಚೇರಿಯಿಂದ ಚೆನ್ನಮ್ಮ ವೃತ್ತಕ್ಕೆ ತೆರಳಿ, ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ನಗರದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಸುವರ್ಣಸೌಧದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ತಲುಪಲಿದ್ದು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕನ್ನಡ ಸಂಘಟನೆಯ ಪ್ರತಿಭಟನೆಯಲ್ಲಿ ರೈತ ಸಂಘಟನೆ ಮುಖಂಡರು ಭಾಗಿಯಾಗಲಿದ್ದಾರೆ. ಸರ್ಕಾರ ಕೂಡಲೇ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಬೆಳಗಾವಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ತಿಳಿಸಿದರು.