ಕರ್ನಾಟಕ

karnataka

ETV Bharat / headlines

ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ : ಡಿಸಿ ರೋಹಿಣಿ ಸಿಂಧೂರಿ - mysore news

ಆಕ್ಸಿಜನ್ ಸಂಬಂದಿಸಿದಂತೆ ಮುಂಚಿತವಾಗಿ ಮಾಹಿತಿ ನೀಡಬೇಕು. ಆಸ್ಪತ್ರೆಗಳಲ್ಲಿ ದಾಖಾಲಾಗುವ ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ಸೂಚಿಸಿದರು..

 DC rohini sindhuri warning to private hospitals
DC rohini sindhuri warning to private hospitals

By

Published : Apr 25, 2021, 8:30 PM IST

ಮೈಸೂರು: ಕೋವಿಡ್-19 ಚಿಕಿತ್ಸೆಗಾಗಿ ಹಾಸಿಗೆಗಳಿದ್ದರೂ ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಎಚ್ಚರಿಕೆ ನೀಡಿದರು.

ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು. ಈ ಬಗ್ಗೆ ಪ್ರತಿದಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಒಳಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆಯಿಂದಾಗಿ ಸಾಮಾನ್ಯ ಜನರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು.

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೆಂಟಿಲೇಟರ್, ಆಕ್ಸಿಜನ್‌ ವ್ಯವಸ್ಥೆವುಳ್ಳ ಹಾಸಿಗೆಗಳ ಮಾಹಿತಿ ಕುರಿತು ಆರೋಗ್ಯ ಮಿತ್ರ ಹಾಗೂ ಜಿಲ್ಲಾಡಳಿತ ನಿಯೋಜಿಸಿರುವ ನೋಡೆಲ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಕೋವಿಡ್-19 ಎರಡನೇ ಅಲೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಸೋಂಕಿಗೆ ಒಳಪಟ್ಟವರಿಗೆ ಚಿಕಿತ್ಸೆ ದೊರಕುವುದು ತಡವಾಗಬಾರದು‌. ಮೈಸೂರು ಜಿಲ್ಲೆಯು ಆರೋಗ್ಯ ವ್ಯವಸ್ಥೆಯಲ್ಲಿ ಉತ್ತಮವಾಗಿದೆ.

ಯಾವುದೇ ಕಾರಣಕ್ಕೂ ಸರಿಯಾದ ಚಿಕಿತ್ಸೆ ದೊರಕದೆ ರೋಗಿ ಸಾವನ್ನಪ್ಪಿದ ಅಪಖ್ಯಾತಿಗೆ ಒಳಗಾಗಬಾರದು. ಆದ್ದರಿಂದ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಸಾವು ಸಂಭವಿಸಿದ ದಿನದಂದೇ ಡೆತ್ ಆಡಿಟ್ ಆಗಬೇಕು. ಆಸ್ಪತ್ರೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಕ್ರಮವಹಿಸುತ್ತಿದೆ‌.

ಆಕ್ಸಿಜನ್ ಸಂಬಂದಿಸಿದಂತೆ ಮುಂಚಿತವಾಗಿ ಮಾಹಿತಿ ನೀಡಬೇಕು. ಆಸ್ಪತ್ರೆಗಳಲ್ಲಿ ದಾಖಾಲಾಗುವ ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಪ್ರಸಾದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ರವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ABOUT THE AUTHOR

...view details