ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನರೇಶ್ ಗೌಡ ಹಾಗೂ ಶ್ರವಣ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಜೂನ್ 2ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನರೇಶ್ ಗೌಡ ಹಾಗೂ ಶ್ರವಣ್ ಸಲ್ಲಿಸಿರುವ ಅರ್ಜಿಯನ್ನು ನಗರದ ಸಿಟಿ ಸಿವಲ್ ಅಂಡ್ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಇಂದು ವಿಚಾರಣೆ ನಡೆಸಿದರು.
ಈ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸದ ಪ್ರಾಸಿಕ್ಯೂಷನ್ ಪರ ವಕೀಲರ ವಿರುದ್ಧ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಾಲಯಕ್ಕೆ ಸಮಜಾಯಿಸಿ ನೀಡಲು ಪ್ರಯತ್ನಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂದರು. ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್ ಪೊನ್ನಣ್ಣ, ಈ ಅರ್ಜಿಗೂ ಹೈಕೋರ್ಟ್ ನಲ್ಲಿರುವ ಪಿಐಎಲ್ ಗೂ ಯಾವುದೇ ಸಂಬಂಧವಿಲ್ಲ. ವಿಚಾರಣೆ ನಡೆಸಬಹುದು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ :
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಸಿಡಿ ಸೃಷ್ಟಿಸಿ, ಬ್ಲ್ಯಾಕ್ ಮೇಲ್ ಮತ್ತು ವಂಚನೆ ಮಾಡಲಾಗಿದೆ ಎಂದು ಜಾರಕಿಹೊಳಿ ಆಪ್ತ ನಾಗರಾಜ್ ಎಂಬುವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕಳೆದ ಮಾರ್ಚ್‌ನಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸರು ಆರೋಪಿತರನ್ನು ಬಂಧಿಸುವ ಸಾಧ್ಯತೆ ಇದ್ದು, ನಿರೀಕ್ಷಣಾ ಜಾಮೀನು ಕೋರಿ ನರೇಶ್ ಗೌಡ ಹಾಗೂ ಶ್ರವಣ್ ಅರ್ಜಿ ಸಲ್ಲಿಸಿದ್ದಾರೆ.