ನವದೆಹಲಿ:ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಗೂ ಮುನ್ನ ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 370ನೇ ವಿಧಿ ರದ್ದುಗೊಂಡ ಬಳಿಕ ಈ ವಿಚಾರದಿಂದ ಹಿಂದೆ ಸರಿದಿದ್ದರು.
ಕಾಶ್ಮೀರ ಸಮಸ್ಯೆ ಸದ್ಯ ವಿಶ್ವಸಂಸ್ಥೆಯ ಕದ ತಟ್ಟಿರುವ ವೇಳೆ ಡೊನಾಲ್ಡ್ ಟ್ರಂಪ್ ಮತ್ತೆ ಮಧ್ಯಸ್ಥಿಕೆಯ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.
ಎರಡು ದಿನದ ಹಿಂದೆ ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಬೆನ್ನಲ್ಲೇ ಟ್ರಂಪ್ ಮತ್ತೆ ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ.
ಕಾಶ್ಮೀರ ಸಮಸ್ಯೆ ಅತ್ಯಂತ ಜಟಿಲವಾದದ್ದು. ಆ ಸ್ಥಳದಲ್ಲಿ ಹಿಂದೂಗಳು ಹಾಗೂ ಮುಸ್ಲಿಮರು ವಾಸಿಸುತ್ತಿದ್ದು, ಹೀಗಾಗಿ ಮಾತುಕತೆಯನ್ನು ಅತ್ಯಂತ ಸೂಕ್ಷ್ಮವಾಗಿ ಮಾಡಬೇಕು. ಸಮಸ್ಯೆ ಬಗೆಹರಿಸಲು ಮಧ್ಯಸ್ಥಿಕೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.