ನ್ಯೂಯಾರ್ಕ್(ಯುಸ್):ಪ್ರಧಾನಿ ನರೇಂದ್ರ ಮೋದಿಯವರ ಮೂರು ದಿನಗಳ ಅಮೆರಿಕ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ನರೇಂದ್ರ ಮೋದಿ ಮಾತನಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಶೃಂಗ್ಲಾ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನರೇಂದ್ರ ಮೋದಿ ಭಾಗಿಯಾಗಿ ಮಾತನಾಡಿರುವುದು ಅತ್ಯಂತ ಪರಿಣಾಮಕಾರಿಯಾಗಿದೆ.
ಅವರ ಅಮೆರಿಕ ಪ್ರವಾಸ ಯಶಸ್ವಿಯಾಗಿದೆ ಎಂದಿದ್ದಾರೆ. ಇದರ ಜೊತೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಧಾನಿಯೊಬ್ಬರು ಕಡಲ ಭದ್ರತೆ ಬಗ್ಗೆ ಚರ್ಚೆ ಮಾಡಿದ್ದು, ಅದರಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಹಂಚಿಕೊಂಡರು.
ಮಹಾಮಾರಿ ಕೋವಿಡ್ ವೈರಸ್ ನಂತರ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಮೊದಲ ವಿದೇಶ ಪ್ರವಾಸ ಇದಾಗಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಸೇರಿದಂತೆ ಅನೇಕರನ್ನ ಭೇಟಿ ಮಾಡಿ ಮಾತನಾಡಿದರು. ಇದಾದ ಬಳಿಕ ಆಸ್ಟ್ರೇಲಿಯಾ, ಜಪಾನ್ ಪ್ರಧಾನಿಗಳೊಂದಿಗೆ ಸಮಾಲೋಚನೆ ನಡೆಸಿದ ನಮೋ, ಕ್ವಾಡ್ ಶೃಂಗದಲ್ಲೂ ಭಾಗಿಯಾಗಿದ್ದರು.