ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿರಂತರವಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಪ್ರದೇಶಗಳಲ್ಲಿ ಒಟ್ಟು 832 ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 118 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಉಪನಗರಗಳಲ್ಲಿ 79 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,721 ಕ್ಕೆ ತಲುಪಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಝೀಮ್ ಜಿಯಾ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಖೈಬರ್ ಪಖ್ತುನ್ಖ್ವಾ (Khyber Pakhtunkhwa), ಪಂಜಾಬ್ ಪ್ರಾಂತ್ಯಗಳಲ್ಲಿ ಹಾಗೂ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಹೊಸದಾಗಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಖೈಬರ್ ಪಖ್ತುನ್ಖ್ವಾ ಪ್ರದೇಶದಲ್ಲೇ ಅತಿ ಹೆಚ್ಚು ಅಂದ್ರೆ 168 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಪ್ರಾಂತ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,672 ಕ್ಕೆ ತಲುಪಿದೆ. ಐವರು ಸಾವನ್ನಪ್ಪಿದ್ದು, 214 ರೋಗಿಗಳು ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಇನ್ನು ಪಂಜಾಬ್‌ನಲ್ಲಿ 546 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದು, ಅದರಲ್ಲಿ 361 ಪ್ರಕರಣಗಳು ಲಾಹೋರ್‌ನಲ್ಲಿ ಕಂಡುಬಂದಿವೆ.
ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಪಾಕಿಸ್ತಾನ ಸರ್ಕಾರವು ಡೆಂಗ್ಯೂ ಹಾಟ್‌ಸ್ಪಾಟ್‌ಗಳಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳುತ್ತಿದೆ.