ವಿಶ್ವಸಂಸ್ಥೆ: ವಿಶ್ವ ಆಹಾರ ಕಾರ್ಯಕ್ರಮದ (ಡಬ್ಲ್ಯುಎಫ್‌ಪಿ) ಆಹಾರ ಖರೀದಿಗೆ ಅನುಕೂಲವಾಗಲು ರಫ್ತು ನಿರ್ಬಂಧಗಳಿಂದ ವಿನಾಯಿತಿ ನೀಡುವ ಉನ್ನತ ಮಟ್ಟದ ಯುಎನ್ ಸಮಿತಿಯ ಶಿಫಾರಸು ಸ್ವಾಗತಿಸಿರುವ ಭಾರತ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣದಿಂದ ಉಂಟಾದ ಇಂಧನ ಬಿಕ್ಕಟ್ಟು ಎದುರಿಸಲು ಅಂತರರಾಷ್ಟ್ರೀಯ ಸಹಕಾರಕ್ಕೆ ಕರೆ ನೀಡಿದೆ.
ಗುರುವಾರ ನಡೆದ ಭದ್ರತಾ ಮಂಡಳಿಯ ಮಹತ್ವದ ಸಭೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಮಾತನಾಡಿ, "ಘರ್ಷಣೆಯು ಪ್ರಾದೇಶಿಕ ಮತ್ತು ಜಾಗತಿಕವಾಗಿ ಹೆಚ್ಚು ಪರಿಣಾಮ ಬೀರುತ್ತಿದೆ. ತೈಲ ಬೆಲೆಗಳು ಗಗನಕ್ಕೇರುತ್ತಿವೆ. ಆಹಾರ ಧಾನ್ಯಗಳು, ರಸಗೊಬ್ಬರಗಳ ಕೊರತೆ ಉಂಟಾಗಿದೆ. ಇದು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ" ಎಂದು ಆತಂಕ ವ್ಯಕ್ತಪಡಿಸಿದರು.