ಕೊಲಂಬೊ: ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಆಹಾರ, ವಿದ್ಯುತ್, ಔಷಧ ಕೊರತೆಯಿಂದ ದೇಶದ ಪ್ರಜೆಗಳು ನಲುಗಿದ್ದಾರೆ. ಹೀಗಾಗಿ, ದೇಶದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ, ಈ ವಾರವೇ ಹೊಸ ಸಂಪುಟ ರಚನೆ ಮಾಡಿ, ನೂತನ ಪ್ರಧಾನಿ ನೇಮಕ ಮಾಡುವುದಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಭರವಸೆ ನೀಡಿದ್ದಾರೆ.
ಬುಧವಾರ ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಸಂಪೂರ್ಣ ಬಹುಮತ ಹೊಂದಿರುವ ಸಂಪುಟವನ್ನು ಮತ್ತು ಪ್ರಧಾನಿಯನ್ನು ಈ ವಾರವೇ ನೇಮಿಸುತ್ತೇನೆ. ಸಂಸತ್ತಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಸಂವಿಧಾನದ 19ನೇ ತಿದ್ದುಪಡಿಯ ವಿಷಯವನ್ನು ಜಾರಿಗೆ ತರಲು ಸಂವಿಧಾನಾತ್ಮಕ ತಿದ್ದುಪಡಿಯನ್ನು ಜಾರಿಗೆ ತರಲಾಗುವುದು. ಜೊತೆಗೆ ಹೊಸ ಪ್ರಧಾನಿಗೆ ದೇಶವನ್ನು ಮುನ್ನಡೆಸಲು ಅಗತ್ಯವಾದ ಅಧಿಕಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.