ನವದೆಹಲಿ:ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತೆಯ ಸಹೋದರನ ದೂರಿನ ಮೇರೆಗೆ ಈ ಹಿಂದೆ ಹಥ್ರಾಸ್ ಜಿಲ್ಲೆಯ ಚಂದಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಬೆಳಗ್ಗೆ ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಸಿಬಿಐ ತನಿಖೆ ಪ್ರಾರಂಭಿಸಿದೆ.
ಉತ್ತರ ಪ್ರದೇಶ ಸರ್ಕಾರದ ಮನವಿ ಹಾಗೂ ಅಧಿಸೂಚನೆ ಮೇರೆಗೆ ಸಿಬಿಐ ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದು, ತನಿಖೆಗಾಗಿ ವಿಶೇಷ ತಂಡವೊಂದನ್ನು ರಚಿಸಿದೆ ಎಂದು ಸಿಬಿಐ ವಕ್ತಾರ ಆರ್.ಕೆ.ಗೌರ್ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 14ರಂದು ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು, ಆಕೆ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ತರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತದೇಹವನ್ನು ಸಂತ್ರಸ್ತೆಯ ಕುಟುಂಬಕ್ಕೆ ಹಸ್ತಾಂತರಿಸದೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.