ಭೋಪಾಲ್: ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶುಕ್ರವಾರ ರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಹಿಳೆಯರು ಮೃತಪಟ್ಟಿದ್ದಾರೆ.
ಮಹೇಶ್ ಗುಪ್ತಾ ಕುಟುಂಬ ಸತ್ನಾದಿಂದ ಕಕರ್ಹಾಟಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಲ್ವರ್ಟು ಗ್ರಾಮದ ಬಳಿ ಕಾರು ಚಲಾಯಿಸುತ್ತಿದ್ದ ಗುಪ್ತಾ ನಿಯಂತ್ರಣ ಕಳೆದುಕೊಂಡಿದ್ದು, ಕಾರು ಕಂದಕಕ್ಕೆ ಉರುಳಿ ಬಿದ್ದಿದೆ.
ಕಾರು ಕಂದಕಕ್ಕೆ ಬಿದ್ದ ಪರಿಣಾಮ ಮುನ್ನಿ ಗುಪ್ತಾ (50), ಅಂಜು ಗುಪ್ತಾ (40), ಜ್ಯೋತಿ ಗುಪ್ತಾ (35), ಬಡ್ಡಿ ಗುಪ್ತಾ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಪೂಜಾ ಗುಪ್ತಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮಹೇಶ್ ಗುಪ್ತಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.