ಶ್ರೀನಗರದ ಅವಂತಿಪುರ್ ಪುಲ್ವಾಮ್ ಮಾರ್ಗ ಮಧ್ಯೆ ಯೋಧರು ಬಸ್ನಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇನ್ನು ಘಟನೆಯಲ್ಲಿ ಅನೇಕ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದಾಳಿಯ ಹೊಣೆಯನ್ನ ಜೈಷ್-ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಯನ್ನು ರವಾನಿಸಲಾಗಿದ್ದು, ಇಡೀ ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಬಡಗಾಂವ್‌ನಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಭಾರತೀಯ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿದ ಮೇಲೆ ಯೋಧರ ಮೇಲೆ ನಡೆದ ಅತಿ ದೊಡ್ಡ ದಾಳಿ ಇದಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ಸ್ಕಾರ್ಪಿಯೋ ಕಾರಿನಲ್ಲಿ ಬಂದ ಉಗ್ರರು ಸಿಆರ್ಪಿಎಫ್ ವಾಹನದ ಮೇಲೆ ಗ್ರೇನೆಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 40ಕ್ಕೂ ಹೆಚ್ಚು ಯೋಧರು ಮೃತಪಟ್ಟು 40 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಯೋಧರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇತ್ತ ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಾಳೆ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಯೋಧರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ತಿಳಿಸಿರುವುದಾಗಿ ಅವರ ಹೇಳಿದ್ದಾರೆ.