ಪುಣೆ (ಮಹಾರಾಷ್ಟ್ರ)ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಪಾಯಲ್ ರೋಹಟಗಿ ವಿರುದ್ಧ ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಗೀತಾ ತಿವಾರಿ ಎಂಬುವರು ದೂರು ನೀಡಿದ್ದಾರೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೇ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಸಿದ್ದರು. ಅವರ ಈ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ತಿವಾರಿ ದೂರು ನೀಡಿದ್ದಾರೆ.
ಜಾಲತಾಣದ ಮೂಲಕ ಸಮುದಾಯಗಳ ನಡುವೆ ಬಿರುಕು ಮೂಡಿಸಲು ನಟಿ ಪ್ರಯತ್ನಿಸುತ್ತಿದ್ದಾರೆ. ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಿವಾರಿ ಹಾಗೂ ಸ್ಥಳೀಯ ನಾಯಕರು ಅಲ್ಲಿನ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮೊದಲು ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು.
ಬಳಿಕ ಈ ಪ್ರಕರಣವನ್ನು ಶಿವಾಜಿನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಠಾಣೆಗೆ ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ಶಿವಾಜಿನಗರ ಪೊಲೀಸರು ಪಾಯಲ್ ರೋಹಟಗಿ ಮತ್ತು ವಿಡಿಯೋ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ 153 ಎ, 500, 505/2, 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಿವುಡ್ ನಟಿ ಪಾಯಲ್ ರೋಹಟಗಿ ಸಹಾಯಕ ಇನ್ಸ್‌ಪೆಕ್ಟರ್ ಮಾನೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ನಟಿ ಪಾಯಲ್ ರೋಹಟಗಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಮಹಾತ್ಮ ಗಾಂಧಿ ಬಗ್ಗೆ ಫೇಸ್‌ಬುಕ್‌ನಲ್ಲಿ ಇದೇ ರೀತಿಯ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕಿ ವಿವಾದವನ್ನು ಸೃಷ್ಟಿಸಿದ್ದರು.